ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಸಚಿವರಾದ ನಂತರ ಇಂದು ರಾಜ್ಯಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ನಂತರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಕೇಂದ್ರ ಸಚಿವರಾದ ನಂತರ ಕುಮಾರಸ್ವಾಮಿ ಅವರ ಮೊದಲ ಭೇಟಿ ಇದಾಗಿದೆ. ನಾಳೆ ಅವರು ಸ್ಪೀಕರ್ ಭೇಟಿಯಾಗಿ ಶಾಸಕರ ಸ್ಥಾನಕ್ಕೆ ರಾಜೀನಾಮೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.