ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ‘ಮೈತ್ರಿ’ ಮಾಡಿಕೊಳ್ಳಬಹುದು ಎಂಬ ವದಂತಿಗಳಿಗೆ ತೆರೆ ಎಳೆದಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪವಿಲ್ಲ. ಎಲ್ಲ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.
ಸೋಮವಾರದಂದು ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಾಕಷ್ಟು ಪಾಠ ಕಲಿತಿದ್ದೇವೆ. ಮೈತ್ರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಕತ್ತು ಕೊಯ್ಯುವ ಕೆಲಸ ಮಾಡಿದರು ಎಂದು ಆರೋಪಿಸಿದರಲ್ಲದೇ, ಇದರಿಂದ ಪಕ್ಷದ ಕಾರ್ಯಕರ್ತರು ಬಲಿಪಶುಗಳಾಗುವಂತಾಯಿತು. ಈ ಬಾರಿ ನಾವು 28 ಕ್ಷೇತ್ರಗಳಲ್ಲಿ ಕಣಕ್ಕಿಳಿದರೂ ಸಹ ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಕುರಿತಂತೆ ಮಾಹಿತಿ ನೀಡಿದ HDK, 5 ವರ್ಷ ಯಾವುದೇ ಚುನಾವಣೆ ಬೇಡ ಎಂದು ಅವನಿಗೆ ಹೇಳಿದ್ದೇನೆ, ಈ ಹಿಂದೆ ಅವನು ಸ್ಪರ್ಧಿಸಿದ್ದ ಎರಡು ಚುನಾವಣೆಗಳಲ್ಲೂ ಕುತಂತ್ರದಿಂದ ಸೋಲನ್ನಪ್ಪುವಂತಾಯಿತು. ಹೀಗಾಗಿ ಸದ್ಯಕ್ಕೆ ಸಿನಿಮಾ ಕ್ಷೇತ್ರದಲ್ಲಿಯೇ ನಿಖಿಲ್ ಮುಂದುವರೆಯಲಿದ್ದು, ಅವನಿಗಾಗಿ ಮೂರು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿದ್ದಾರೆ ಎಂದು ಹೇಳಿದರು.