ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಕೊನೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಠಾಕೂರ್ ಅವರು, ಈ ವ್ಯಕ್ತಿ ಮಹಿಳೆಯರಿಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದ. ಈ ಕಾರಣದಿಂದ ಆತನಿಗೆ ಒದೆಯುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹೊಸೂರು ಬಳಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಉಂಟಾದ ಹಿಂಸಾಚಾರವನ್ನು ನಿಯಂತ್ರಿಸಲು ಎಸ್ಪಿ ಮೈದಾನದಲ್ಲಿ ನಿಂತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಅದರ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಪ್ರಶ್ನಿಸಿದಾಗ ಠಾಕೂರ್ ಅವರು, ಇತರ ರಾಜ್ಯಗಳ ಪುರುಷರ ಗುಂಪು ಮಹಿಳೆಯರಿಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿತ್ತು. ಆ ಕ್ಷಣದಲ್ಲಿ ಪುಂಡರ ಗುಂಪು ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ತೊಂದರೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.
ಇಲ್ಲಿ ನಡೆಯುತ್ತಿರುವ ಜಲ್ಲಿಕಟ್ಟು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸರು ಯುವಕರನ್ನು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅವರು ತಳ್ಳಿ ಹಾಕಿದರು.