ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.
ಆರೋಗ್ಯ ಇಲಾಖೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇರುವ ವಿಚಾರದ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ.
ಸರ್ಕಾರದ ಪರ ವಕೀಲರು ಪ್ರಮಾಣ ಪತ್ರ ಸಲ್ಲಿಸಿ, ವೈದ್ಯಾಧಿಕಾರಿಗಳಿಂದ ಹಿಡಿದು ಡಿ ಗ್ರೂಪ್ ನೌಕರರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 34,967 ಹುದ್ದೆಗಳು ಮಂಜೂರಾಗಿವೆ. 20,444 ಹುದ್ದೆಗಳು ಭರ್ತಿಯಾಗಿದ್ದು, ಖಾಲಿ ಇರುವ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದೆ.