ನವದೆಹಲಿ: ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 6 ಗಂಟೆಗಳೊಳಗೆ ಎಫ್‌ಐಆರ್ ದಾಖಲಿಸುವಂತೆ ಆರೋಗ್ಯ ಸಚಿವಾಲಯವು ನಿರ್ದೇಶನ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಈ ಕುರಿತಾಗಿ ಸೂಚನೆ ನೀಡಲಾಗಿದ್ದು, ವೈದ್ಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಗರಿಷ್ಠ ಆರು ಗಂಟೆಗಳ ಒಳಗೆ ಎಫ್‌ಐಆರ್ ದಾಖಲಿಸಲು ಸಾಂಸ್ಥಿಕ ಸಂಸ್ಥೆಯ ಮುಖ್ಯಸ್ಥರು ಜವಾಬ್ದಾರರಾಗಿರುತ್ತಾರೆ ಎಂದು ನಿರ್ದೇಶಿಸಿದೆ.
ಈ ಸಂಬಂಧ ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರಿಗೆ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಅತುಲ್ ಗೋಯೆಲ್ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ವೈದ್ಯೆ ಹತ್ಯೆಯ ಘಟನೆ ಮತ್ತು ವೈದ್ಯರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.
ಇತ್ತೀಚೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಆರೋಗ್ಯ ಸಿಬ್ಬಂದಿಗಳ ಮೇಲೆ ಹಿಂಸಾಚಾರ ನಡೆಯುತ್ತಿರುವುದು ಸಾಮಾನ್ಯವಾಗಿದೆ. ಹಲವಾರು ಆರೋಗ್ಯ ಕಾರ್ಯಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ದೈಹಿಕ ಹಿಂಸೆಯನ್ನು ಅನುಭವಿಸುತ್ತಾರೆ. ಅನೇಕರು ಬೆದರಿಕೆ ಅಥವಾ ಮೌಖಿಕ ಆಕ್ರಮಣಕ್ಕೆ ಒಳಗಾಗುತ್ತಾರೆ. ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಹೇಳಲಾಗಿದೆ.