ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗೌಡರ್ ಹೋಟೆಲ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದರು. ಅಕ್ಟೋಬರ್ 14ರಂದು ಬೆಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದ ಅವರನ್ನು ಬುಧವಾರ ಬೆಳಗ್ಗೆಯಿಂದ ಕುಟುಂಬಸ್ಥರು ಸಂಪರ್ಕಕ್ಕೆ ಪ್ರಯತ್ನಿಸಿದ್ದರೂ ಸಂಪರ್ಕ ಸಾಧ್ಯವಾಗಿರಲಿಲ್ಲ. ಬಳಿಕ ತೀರ್ಥಹಳ್ಳಿ ಠಾಣೆ ಪೊಲೀಸರಿಗೆ ಕುಟುಂಬದವರು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದು, ಉಪ್ಪಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಎಂಟು ಗಂಟೆ ಸುಮಾರಿಗೆ ಕೊಠಡಿ ಬಾಗಿಲು ತೆರೆದಾಗ ಜಕ್ಕಣ್ಣಗೌಡರ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗುವುದು. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.