ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ, ಅಂಕೋಲಾ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ ಇಂದು ರಜೆ ಘೋಷಿಸಿ ಆದೇಶಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ.