ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕೆಯಿಂದ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಸರ್ಕಾರಿ, ಅನುದಾನಿತ, ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಡಿಸಿ ರಜೆ ಘೋಷಣೆ ಮಾಡಿದ್ದಾರೆ. ಕಾಲೇಜಿಗೆ ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಬುಧವಾರ ಕೂಡ ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಬುಧವಾರ ರೆಡ್ ಅಲರ್ಟ್ ಇರುವುದರಿಂದ ಮುಂಜಾಗ್ರತೆ ಕ್ರಮದಿಂದ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಾಂಡೇಲಿ, ಹಳಿಯಾಳ, ಕಾರವಾರ, ಜೋಯಿಡಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ರಜೆ ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.