ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ.
ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ.
ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ನವೆಂಬರ್ 13, 14 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆ ಆಗಲಿದೆ.
ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ, ತಿರುವರೂರು, ವೆಲ್ಲೂರು, ಕಡಲೂರು, ನಾಗಪಟ್ಟಣ, ತಂಜಾವೂರು, ವೆಲ್ಲುಪುರಂ ನೀಲಗಿರಿ ಜಿಲ್ಲೆ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.