ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಕೆರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆ, ಸೇತುವೆ ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರುಹರಿಯುತ್ತಿರುವ ಕಾರಣ ವಾಹನಗಳ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ.
ಜಮೀನು, ಹೊಲ, ಗದ್ದೆ, ತೋಟಗಳು ಜಲಾವೃತಗೊಂಡು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ನೀರಿನಲ್ಲಿ ಬೆಳೆ ಮುಳುಗಿ, ಮತ್ತೆ ಕೆಲವೆಡೆ ಕೊಚ್ಚಿ ಹೋಗಿದೆ.
ಧಾರವಾಡ ಜಿಲ್ಲಾ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಹಿರೇಕೆರೆ ಭರ್ತಿಯಾಗಿ ತುಂಬಿ ಹರಿಯುತ್ತಿದ್ದು ಸುತ್ತಮುತ್ತಲಿನ ಹೊಲಗಳಿಗೆ ನೀರು ರಸ್ತೆಯ ಮೇಲೆ ನೀರು ಹರಿಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಅಂಕೋಲದ ಹಲವು ಮನೆಗಳಿಗೆ ನೀರು ನುಗ್ಗಿದೆ. ಐಲ್ಯಾಂಡ್ ಹೋಟೆಲ್, ಪೆಟ್ರೋಲ್ ಪಂಪ್ ಜಲಾವೃತಗೊಂಡಿವೆ. ಹೋಟೆಲ್ ಸಿಬ್ಬಂದಿ ಮಹಡಿ ಏರಿ ಕುಳಿತುಕೊಂಡಿದ್ದಾರೆ.
ಯಲ್ಲಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಳಚೆಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಲ್ಲಾಪುರ ಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ದೋಣಿ ಮುಳುಗಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕು ಶಿರೂರ ಗ್ರಾಮದ ಬಳಿ ಸ್ಥಳಾಂತರದ ವೇಳೆ ದೋಣಿ ಮುಳುಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, 20 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಚನ್ನಗಿರಿ ತಾಲೂಕಿನಲ್ಲಿ 9 ಮನೆಗಳಿಗೆ ಹಾನಿಯಾಗಿದ್ದು, ನಲ್ಲೂರು, ಕಬ್ಬಳ, ತಿಪ್ಪಗೊಂಡನಹಳ್ಳಿ, ಆಲೂರು, ಸಂಗಹಳ್ಳಿ, ಹೊಸಹಳ್ಳಿಯಲ್ಲಿ ಮನೆಗಳು ಹಾನಿಯಾಗಿವೆ. ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಮಳೆ ಅವಾಂತರಕ್ಕೆ ಸೇತುವೆ ಕೊಚ್ಚಿಹೋಗಿದ್ದು, ಭಾರಿ ಪ್ರಮಾಣದಲ್ಲಿ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ಮಳೆಯಿಂದಾಗಿ ಕೆಂಗಾಪುರ -ಸೂಳೆಕೆರೆ ಹಳ್ಳ ತುಂಬಿ ಹರಿಯುತ್ತಿದ್ದು, ಕೆಂಗಾಪುರ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದ ಬಳಿ ಹಳ್ಳದ ನೀರು ನುಗ್ಗಿ ಸುತ್ತಲಿನ ಜಮೀನುಗಳು ಜಲಾವೃತಗೊಂಡಿವೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ವಾಘವಾಡೆ ಬಳಿ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ರಕ್ಷಣೆ ಮಾಡಲಾಗಿದೆ. ಗ್ರಾಮಸ್ಥರು ಹಗ್ಗವನ್ನು ಎಸೆದು ಯುವಕನನ್ನು ರಕ್ಷಣೆ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಹಳೆಯ ಸೇತುವೆ ಜಲಾವೃತಗೊಂಡಿದೆ. ಘಟಪ್ರಭಾ ನದಿ ಅಪಾಯದ ಮಟ್ಟವನ್ನು ಮೀರಿ ಹಡಿಯುತ್ತಿದ್ದು, ಮಿರ್ಜಿ ಗ್ರಾಮದ ಬಳಿಯ ಹಳೆಯ ಸೇತುವೆ ಜಲಾವೃತಗೊಂಡಿದೆ.
ಗದಗ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಯಿಂದಾಗಿ ಇಪ್ಪತ್ತಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿತ ಕಂಡಿವೆ. ನರಗುಂದ, ಲಕ್ಷ್ಮೇಶ್ವರ ತಾಲೂಕಿನಲ್ಲಿ ಮನೆಗಳು ಕುಸಿದಿವೆ.
ಕೊಡಗುಜಿಲ್ಲೆ ಪೊನ್ನಂಪೇಟೆ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸತತ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಮೂಡಿಗೆರೆ ತಾಲ್ಲೂಕಿನ ಬೈದುಹಳ್ಳಿಯಲ್ಲಿ ತೋಟಗಳು ಜಲಾವೃತಗೊಂಡಿದ್ದು, ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ. ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ನದಿಪಾತ್ರದ ಹಳ್ಳಿಗಳಲ್ಲಿ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಲ್ಲದೆ, ಹೆಚ್ಚಿನ ನೆರವು ಬೇಕಾದಲ್ಲಿ ಕೂಡಲೇ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.