ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.
ಭಾರಿ ಮಳೆ ಕಾರಣ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ಗದಗ ಸೇರಿ ಹಲವೆಡೆ ಭಾರಿ ಮಳೆಯಿಂದಾಗಿ ಬೆಳೆ ಹಾಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.