
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರದಿಂದ ಜನ ತತ್ತರಿಸಿಹೋಗಿದ್ದಾರೆ. ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಶನಿವಾರ-ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಮುಂದಿನ ಎರಡು ದಿನ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಪ್ರದೇಶದಲ್ಲಿಯೂ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.