ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 16 ಮತ್ತು 17 ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಮುಂದುವರೆಸಲಾಗಿದೆ.
ಅದೇ ರೀತಿ ಮುಂದಿನ ಎರಡು ದಿನಗಳ ಕಾಲ ವಿಜಯಪುರ, ಯಾದಗಿರಿ, ಬಳ್ಳಾರಿ, ರಾಯಚೂರು, ಕಲ್ಬುರ್ಗಿ, ಹಾವೇರಿ, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ಭಾರಿ ಮಳೆ, ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.