ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕಿನ ಶಾಲಾ ಕಾಲೇಜುಗಳು ಅಂಗನವಾಡಿ ಕೇಂದ್ರಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮಹಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಕಾರಣ ಸುಳ್ಯ ಮತ್ತು ಕಡಬ ತಾಲೂಕಿನ ಶಾಲಾ, ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದ್ದಾರೆ.