ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು, ಜಮೀನುಗಳಿಗೆ ನೀರು ನುಗ್ಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನು, ಗ್ರಾಮಗಳಿಗೆ ನೀರು ನುಗ್ಗಿದೆ. ಹಲವೆಡೆ ಸಂಪರ್ಕ ಕಡಿತಗೊಂಡಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೆಗಂಗೂರು ಬಳಿ ನಿನ್ನೆ ಹಳ್ಳದಲ್ಲಿ ಕೊಚ್ಚಿ ಹೋದ ರೈತ ರಾಜಪ್ಪ ಅವರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ತೋಟದಿಂದ ಮನೆಗೆ ಬರುವಾಗ ಹಿರೇಹಳ್ಳದ ನೀರಿನಲ್ಲಿ ರೈತ ರಾಜಪ್ಪ ಕೊಚ್ಚಿ ಹೋಗಿದ್ದರು. ಅವರಿಗಾಗಿ ಹುಡುಕಾಟ ನಡೆಸಲಾಗಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಲ್ಲಹಾಳ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯಿಂದಾಗಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಗುಡಗನಾಳ ಗ್ರಾಮದಲ್ಲಿ ಮನೆಗಳು ಜಲಾವೃತಗೊಂಡಿವೆ. ನಿರಂತರ ಮಳೆಯಿಂದ ಮೂರ್ನಾಲ್ಕು ಮನೆಗಳು ಕುಸಿತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸೂರು ಬಳಿ ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ರೈತರು ರಕ್ಷಿಸಿದ್ದಾರೆ. ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ವ್ಯಕ್ತಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅರಿವೇಸಂದ್ರ ಗ್ರಾಮದಲ್ಲಿ ವಿಜಯಮ್ಮ ಎಂಬುವರ ಮನೆ ಗೋಡೆ ಕುಸಿದಿದೆ. ತಿಪಟೂರು ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಗ್ರಾಮದಲ್ಲಿ ಅಶೋಕ್ ಮನೆ ಕುಸಿದಿದೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ದಿನ್ನಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ಮನೆ ಕುಸಿದು ಮೂವರು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ 10ಕ್ಕೂ ಹೆಚ್ಚು ಮನೆಗಳು ಕುಸಿತವಾಗಿವೆ. ಮನೆ ಕಳೆದುಕೊಂಡ ಸಂತ್ರಸ್ತರಿಂದ ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಬೆಳಗಾವಿ ಜಿಲ್ಲೆ ಬೈರವಾಡ ಗ್ರಾಮದಲ್ಲಿ ಮನೆ ಕುಸಿದು ವ್ಯಕ್ತಿ ಕೈ ಕಟ್ ಆಗಿದೆ. ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ತೊಂದರೆಯಾಗಿದೆ.