ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯ ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್ ಆರ್ ಪುರದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದ್ದು, ಜನಸಂಚಾರ ಅಸ್ತವ್ಯಸ್ಯವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ನಲ್ಲಿ ಕೂಡ ಭಾರಿ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಚಾರ್ಮಾಡಿ ಘಾಟ್ನಲ್ಲಿ ಮಂಜು ಮಸುಕಿದ ಹಿನ್ನೆಲೆ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗುತ್ತಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ ಮುಂದುವರೆಯಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.