ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಧಾರವಾಡ ಹಾಗೂ ಬೀದರ್ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಗ್ರಾಮಗಳು ಸಂಪರ್ಕ ಕಳೆದುಕೊಳ್ಳುವ ಭೀತಿಯಲ್ಲಿದೆ. ಕಲಬುರಗಿ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟಿಸುತ್ತಿದ್ದು, ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದ್ದು, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರದಲ್ಲಿ ಮಳೆ ಜೋರಾಗಿದೆ. ಹಳ್ಳ, ಹೊಳೆಗಳು ತುಂಬಿ ಹರಿಯುತ್ತಿದೆ.
ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.