ಕಾರವಾರ: ಕರಾವಳಿ ಜಿಲ್ಲೆಗಳು ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದರೆ, ಜಲಪಾತಗಳು, ತೊರೆಗಳು ಧುಮ್ಮಿಕ್ಕಿ ಹರಿಯುತ್ತಿವೆ. ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತವುಂಟಾಗುತ್ತಿದ್ದು, ರಸ್ತೆ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ, ಜಲಪಾತಗಳು ಅಪಾಯದ ಮಟ್ಟದಲ್ಲಿ ಬೋರ್ಗರೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿ ತಾಣ, ಜಲಪಾತಗಳ ಪ್ರದೇಶ, ನದಿ ತೀರಗಳಿಗೆ ಪ್ರವಾಸಿಗರು, ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು, ಕುಳಿಮಾಗೋಡು ಫಾಲ್ಸ್, ಶಿರ್ಲೆ, ಸಾತೊಡ್ಡಿ ಫಾಲ್ಸ್, ಜೇನುಕಲ್ಲು ಗುಡ್ಡ ಸೇರಿದಂತೆ ಹಲವೆಡೆ ಪ್ರವೇಶಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸಿ ತಾಣ, ನದಿ ಪ್ರದೇಶಗಳಿಗೆ ತೆರಳದಂತೆ ಅರಣ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಅಲ್ಲದೇ ಅಲ್ಲಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕಿ ನಿರ್ಬಂಧ ವಿಧಿಸಿದೆ.