ಬೆಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊಡಗು, ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಮಲೆನಾಡು ಭಾಗದಲ್ಲಿಯೂ ಮುಂಗಾರು ಮಳೆ ಆರ್ಭಟ ಜೋರಾಗಿದೆ.
ಭಾಗಮಂಡಲ ಸೇರಿದಂತೆ ಕೊಡಗಿನ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಸಂಜೆ ವೇಳೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಶೃಂಗೇರಿಯಲ್ಲಿ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ತುಂಗಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಸೋಮವಾರ ಒಂದೇ ದಿನ ತುಂಗಭದ್ರಾ ಜಲಾಶಯಕ್ಕೆ ಒಂದು ಟಿಎಂಸಿಗಿಂತ ಅಧಿಕ ನೀರು ಹರಿದು ಬಂದಿದೆ.
ಹವಾಮಾನ ಇಲಾಖೆ ಇನ್ನೂ ಮೂರು ದಿನ ಕರಾವಳಿಯಲ್ಲಿ ನೈರುತ್ಯ ಮುಂಗಾರು ಆರ್ಭಟದ ಬಗ್ಗೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 2 ರಿಂದ 4ರ ವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಜುಲೈ 2 ರಿಂದ 4ರವರೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮೊದಲ ದಿನ ಮತ್ತು ಮೂರನೇ ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.