ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಟ್ಕಳ, ಹೊನ್ನಾವರ, ಅಂಕೋಲಾ, ಜೋಯಿಡಾ, ಕುಮಟಾ, ಕಾರವಾರ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆಯ ಅಬ್ಬರ ಮುಂದುವರೆದಿದೆ. ಭಾರಿ ಮಳೆಯಿಂದಾಗಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳಸ -ಹೊರನಾಡು ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆ ಮುಳುಗಡೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ರಾತ್ರಿ ಇಡೀ ಭಾರಿ ಮಳೆಯಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಮಳೆಯಿಂದಾಗಿ ಭಾಗಮಂಡಲ ನಾಪೊಕ್ಲು ರಸ್ತೆ ಜಲಾವೃತಗೊಂಡಿದೆ. ಭಾಗಮಂಡಲ -ಮಡಿಕೇರಿ ರಸ್ತೆ ಕೂಡ ಜಲಾವೃತಗೊಳ್ಳುವ ಸಾಧ್ಯತೆಯಿದ್ದು, ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಶಾಲೆಗಳಿಗೆ ರಜೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ.