ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಧಾರಾಕಾರ ಮಳೆಯಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ, ಸೇರಿದಂತೆ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಣೆ ಮಾಡಿದ್ದಾರೆ.
ಹಾಸನ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಡಿಡಿಪಿಐ ಹೆಚ್.ಕೆ. ಪಾಂಡು ರಜೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 10 ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 10 ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶಿಸಿದ್ದಾರೆ.