ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಜು. 19 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಕಡೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಆರು ಜಿಲ್ಲೆಗಳಲ್ಲಿ ಜುಲೈ 16ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಶಾಲಾ -ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವೆಂಕಟರಾಜ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜುಲೈ 16 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ರೆಡ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ -ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಜುಲೈ 16 ರಂದು 5 ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ, ಬೇಲೂರು, ಆಲೂರು, ಅರಕಲಗೂಡು ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಪಾಂಡು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 10 ತಾಲೂಕುಗಳಿಗೆ ಜುಲೈ 16ರಂದು ರಜೆ ನೀಡಲಾಗಿದೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಜುಲೈ 16ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ.