ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗಿದೆ. ಶರಾವತಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಜೋಗ ಜಲಪಾತ ಮೈದುಂಬಿಕೊಂಡಿದ್ದು, ಲಿಂಗನಮಕ್ಕಿ ಒಳಹರಿವು 20,951 ಕ್ಯೂಸೆಕ್ ಗೆ ಹೆಚ್ಚಳವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ತುಂಗಾ, ಭದ್ರಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3 ರಿಂದ 5 ರವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 6ರಿಂದ ಎರಡು ದಿನ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.