ಕೋಲಾರ : ಉಡುಪಿ ಪ್ರಕರಣದ ಬಳಿಕ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ ಸೆರೆ ಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆಗೆ ಬಳಸಿದ ಬೆನ್ನಲ್ಲೇ ಅಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿದೆ. 16 ವರ್ಷದ ವಿದ್ಯಾರ್ಥಿನಿಯೊಬ್ಬರು ಈ ಆರೋಪ ಮಾಡಿದ್ದು, ತನಿಖೆಗೂ ಆದೇಶಿಸಲಾಗಿದೆ.
ಘಟನೆ ಕುರಿತು ಮಕ್ಕಳ ಫೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಸತಿ ಶಾಲೆಯ ಶಿಕ್ಷಕರೇ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಲ್ಲಿನ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುವಾಗ ಹಾಗೂ ಸ್ನಾನ ಮಾಡುವಾಗ ಫೋಟೋ ತೆಗೆದುಕೊಂಡಿದ್ದಾರೆ. ಈ ವಿಚಾರವನ್ನು ಮಕ್ಕಳು ನಮ್ಮ ಬಳಿ ಹೇಳಿಕೊಂಡಿದ್ದಾರೆ ಎಂದು ಪೋಷಕರು ಕಿಡಿಕಾರಿದ್ದಾರೆ.