ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಟೋಲ್ ಶುಲ್ಕ ವಸೂಲಿ ಮಾಡದಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಹೆಜಮಾಡಿ ಟೋಲ್ ದರ ಹೆಚ್ಚಳ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ರಾಜ್ಯ ಮತ್ತು ದೆಹಲಿ ಮಟ್ಟದಲ್ಲಿ ಶೀಘ್ರವೇ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಶುಲ್ಕ ವಸೂಲು ಮಾಡದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್ ಎನ್ಐಟಿಕೆ ಟೋಲ್ ಪ್ಲಾಜಾ ತೆರವುಗೊಳಿಸಿ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ನಲ್ಲಿ ವಿಲೀನಗೊಳಿಸಲಾಗಿದೆ. ಇದರಿಂದ ಉಂಟಾದ ಸಮಸ್ಯೆಗಳ ಕುರಿತು ಉಡುಪಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿದ ನಂತರ ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎನ್ಐಟಿಕೆ ಟೋಲ್ ಅನ್ನು ಅವೈಜ್ಞಾನಿಕವಾಗಿ ಹೆಜಮಾಡಿ ಟೋಲ್ ನಲ್ಲಿ ವಿಲೀನಗೊಳಿಸಿದ್ದು, ಹೆಚ್ಚಿನ ಹೊರೆ ಹಾಕಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಹೆಜಮಾಡಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ರಿಯಾಯಿತಿ ನೀಡಬೇಕು. ಸುರತ್ಕಲ್ ಟೋಲ್ ಅಂದಿನ ಸರ್ಕಾರದ ಪಾಪದ ಕೂಸು. ಇದಕ್ಕೆ ಬೆನ್ನು ತೋರಿಸದೆ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.