ಬೀದರ್: ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಲು ಮತ್ತು ಕಾರ್ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವಂತೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ರಸ್ತೆ ಅಪಘಾತ ಹೆಚ್ಚಿದ್ದು, ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಅಪಘಾತಗಳಲ್ಲಿ ಅನೇಕ ಸರ್ಕಾರಿ ನೌಕರರು ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿಯವರು ಸುತ್ತೋಲೆ ಹೊರಡಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದ್ದು, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಬೀದರ್ ಜಿಲ್ಲೆಯಲ್ಲಿ 2022 ರಲ್ಲಿ 332 ಜನ ಮೃತಪಟ್ಟಿದ್ದು, 2023ರ ಜುಲೈ ಅಂತ್ಯದವರೆಗೆ 197 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 2020ರಲ್ಲಿ 15 ಮತ್ತು 2023ರಲ್ಲಿ 11 ಮಂದಿ ಸರ್ಕಾರದ ವಿವಿಧ ಇಲಾಖೆ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ.
ಸಂಚಾರ ಮತ್ತು ರಸ್ತೆ ಸುರಕ್ಷತಾ ನಿಯಮ ಪಾಲಿಸದಿರುವುದು, ಹೆಲ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಹಾಕದಿರುವುದು ಸಾವಿಗೆ ಕಾರಣವಾಗಿದೆ. ಹೀಗಾಗಿ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ವರ್ಷದ ಡಿಸೆಂಬರ್ ವರೆಗೆ ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಅಭಿಯಾನ ಕೈಗೊಳ್ಳಲಾಗಿದೆ. ಎಲ್ಲರೂ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಹೆಲ್ಮೆಟ್, ಸೀಟ್ ಬೆಲ್ಟ್ ಹಾಕಬೇಕು ಎಂದು ಹೇಳಲಾಗಿದೆ.