ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದ್ದು, ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
“ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರಿ ಆಸ್ತಿ ಇರುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಲು ʼಲ್ಯಾಂಡ್ ಬೀಟ್ʼ ಕಾರ್ಯಕ್ರಮ ಜಾರಿಗೆ ತರಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬರಲಿದೆ. ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ. ಈ ಆಪ್ ಮೂಲಕ ಜಿಯೋ ಫೆನ್ಸಿಂಗ್ ಮಾಡಿ, ಒತ್ತುವರಿ ಮಾಡಿದ್ದಲ್ಲಿ ಅಂತಹ ಆಸ್ತಿಗಳ ವಿವರ ಲಬ್ಯವಾಗುತ್ತದೆ.