ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಿಇಟಿ ಬರೆದಿದ್ದ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಇದರ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದೆ.
ಹಲವು ಇಂಜಿನಿಯರಿಂಗ್ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆದಿಲ್ಲ ಹಾಗೂ ಸರ್ಕಾರದಿಂದ ಅನುಮೋದನೆ ಪಡೆದಿಲ್ಲ ಎಂಬ ಕಾರಣಕ್ಕೆ ರಾಜ್ಯದ 90ಕ್ಕೂ ಹೆಚ್ಚು ಕಾಲೇಜುಗಳ ಸೀಟುಗಳನ್ನು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿದ್ದು, ಸೂಕ್ತ ದಾಖಲೆಗಳನ್ನು ಒದಗಿಸಿದ ಬಳಿಕ ಮರು ಸೇರ್ಪಡೆ ಮಾಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಒಟ್ಟು 9000 ಎಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಸೀಟುಗಳನ್ನು ಸಿಇಟಿ ಅಂತಿಮ ಹಂಚಿಕೆ ಪಟ್ಟಿಯಿಂದ ಕೈ ಬಿಡಲಾಗಿದ್ದು, ಸೀಟು ಕೈ ಬಿಡಲಾದ ಕಾಲೇಜುಗಳ ಪೈಕಿ ಆರ್ ವಿ ಎಂಜಿನಿಯರಿಂಗ್ ಕಾಲೇಜ್, ಎಂಎಸ್ ರಾಮಯ್ಯ, ದಯಾನಂದ ಸಾಗರ್, ಬಿಎಂಎಸ್ ಸೇರಿದಂತೆ ಹಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿವೆ. ಸೂಕ್ತ ದಾಖಲೆಗಳನ್ನು ಒದಗಿಸಿದ ಬಳಿಕ ಮತ್ತೆ ಈ ಕಾಲೇಜುಗಳನ್ನು ಮರು ಸೇರ್ಪಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.