ಇತ್ತೀಚೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಮಂಗಳವಾರದಂದು ಪ್ರಕಟವಾಗಿದ್ದು, ಶೇಕಡಾ 35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿ ವರ್ಷ ನಿಗದಿತ ಸಮಯದಲ್ಲಿ ಮೂರು ಪರೀಕ್ಷೆಗಳನ್ನು ನಡೆಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡ ಬಳಿಕ ನಡೆಸಲಾದ ಎರಡನೇ ಪೂರಕ ಪರೀಕ್ಷೆ ಇದಾಗಿದೆ.
ಈ ಪೂರಕ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಅಂತಿಮ ದಿನಾಂಕವಾಗಿದ್ದು, ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಬೇಕಿದೆ. ಸೆಪ್ಟೆಂಬರ್ 17ರ ಒಳಗಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಛಾಯಾ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿಗಳನ್ನು ನಿಗದಿಪಡಿಸಲಾಗಿದ್ದು, ಮರು ಮೌಲ್ಯಮಾಪನಕ್ಕೆ 1,690 ರೂಪಾಯಿ ನಿಗದಿಪಡಿಸಲಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 18 ಅಂತಿಮ ದಿನಾಂಕವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.