ಬೆಂಗಳೂರು: ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಭೂ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಉದ್ಯಮಿ ಶ್ರೀಶೈಲ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95 ರಿಂದ 97ರ ಪ್ರಕಾರ ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಹಾಗಾಗಿ, ಈ ವ್ಯಾಪ್ತಿಯ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಾನಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ನ್ಯಾಯ ಪೀಠ ಸೂಚಿಸಿದೆ.