ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುತ್ತಿದ್ದು, ಸೋಂಕಿತರಿಗೆ ಬೆಡ್ ಗಳು ಲಭ್ಯವಾಗುತ್ತಿಲ್ಲ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೈಕೋರ್ಟ್ ನಿಂದ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ, ಕೂಡಲೇ ಬೆಡ್ ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ತಿಳಿಸಲಾಗಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ. ವೆಂಟಿಲೇಟರ್ ಸಹಿತ ಐಸಿಯು ಬೆಡ್ ಗಳ ಲಭ್ಯತೆ ಕಡಿಮೆ ಇರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೈಕೋರ್ಟ್, ಅಗತ್ಯವಿರುವ ಐಸಿಯು ಬೆಡ್ ಗಳು ಮತ್ತು ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಬೆಡ್ ಗಳನ್ನು ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದೆ.
ಬೆಡ್ ಗಳ ಸಂಖ್ಯೆ ಹೆಚ್ಚಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಹತ್ತಿರದ ಜಿಲ್ಲಾಸ್ಪತ್ರೆಗಳಲ್ಲಿ ಲಭ್ಯವಿರುವ ಹೆಚ್ಚುವರಿ ಬೆಡ್ ಗಳನ್ನು ಗುರುತಿಸಿ ಐಸಿಯು, ಸಾಮಾನ್ಯ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.