ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆಯೇ ಎಂಬುದರ ಬಗ್ಗೆ ಪ್ರಮಾಣ ಪತ್ರ ಮೂಲಕ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ನಡೆಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದೆ.
ವಿಚಾರಣೆ ನಡೆಸಿದ ನ್ಯಾಯಪೀಠ, ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆಯೇ ಎಂಬುದರ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿದೆ. ವಿಚಾರಣೆಯನ್ನು ಮಾರ್ಚ್ 5 ಕ್ಕೆ ಮುಂದೂಡಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿವಾರು ಸಮೀಕ್ಷೆ ನಡೆಸಲು ಅಧಿಕಾರವೇ ಇಲ್ಲ. ಆದರೂ ಸರ್ಕಾರ ಸಮೀಕ್ಷೆ ನಡೆಸಿದೆ. ಆ ವರದಿಯನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಆಗ ನ್ಯಾಯ ಪೀಠ ವರದಿ ಸ್ವೀಕರಿಸಿದ ಕುರಿತು ವಿವರಣೆ ನೀಡುವಂತೆ ಸೂಚಿಸಿ ಮಂಗಳವಾರಕ್ಕೆ ವಿಚಾರಣೆ ಮುಂದೂಡಿದೆ.