ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಕಡ 54.74 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದ್ದು, ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಇನ್ನು 20 ದಿನಗಳ ಒಳಗೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಮಾಹಿತಿ ಸಲ್ಲಿಸಲಾಗಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಸರ್ಕಾರಿ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, ಪಠ್ಯಪುಸ್ತಕ ಮುದ್ರಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು 20 ದಿನಗಳಲ್ಲಿ ಸಂಪೂರ್ಣವಾಗಿ ಪಠ್ಯಪುಸ್ತಕ ಪೂರೈಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿ ವಿಚಾರಣೆ ಮುಂದೂಡಿದೆ. ಪಠ್ಯಪುಸ್ತಕಗಳು ಇಲ್ಲದೆ ಶಾಲೆಗಳನ್ನು ಆರಂಭಿಸಿರುವುದು ಅರ್ಥಹೀನ ಎಂದು ಹೈಕೋರ್ಟ್ ಕಳೆದ ವಿಚಾರಣೆ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿತ್ತು.