ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅ. 3ರಂದು ಕಾರವಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವಾಗ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಯಾವಾಗ ಸಿದ್ದರಾಮಯ್ಯ ಅಧಿಕಾರಕ್ಕೆ ಬರುತ್ತಾರೋ ಆ ಸಂದರ್ಭದಲ್ಲಿ ಹಿಂದೂಗಳು ಬದುಕುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಹಿಂದೂ ಹಾಗೂ ಮುಸ್ಲಿಂ ಧರ್ಮದವರ ಮಧ್ಯೆ ಕೋಮು ದ್ವೇಷ ಭಾವನೆ ಉಂಟು ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರ ಗ್ರಾಮಾಂತರ ಠಾಣೆ ಪೋಲೀಸರು ದಾಖಲಿಸಿದ್ದರು.
ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ನಡೆದಿದ್ದು, ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರ ಪೀಠ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿದೆ. ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿದೆ.