ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿರುವಂತೆಯೇ ರಾಜ್ಯದಲ್ಲಿಯೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಜೀವ ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಕಳೆದ ವರ್ಷ ಮಾರ್ಚ್ ನಲ್ಲಿ ಬರೆದಿದ್ದ ಪತ್ರ ಆಧರಿಸಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ವಕೀಲರ ಸಂಘ, ವಕೀಲರ ಪರಿಷತ್ ಪದಾಧಿಕಾರಿಗಳು, ವಿಮೆ ಕಂಪನಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ. ಮಾರ್ಚ್ 17 ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.