ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕೆಪಿಟಿಸಿಎಲ್ ಮತ್ತು ಬೆಸ್ಕಾಂಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ತುಮಕೂರು ಜಿಲ್ಲೆಯ ಗೆದ್ಲಹಳ್ಳಿ ನಿವಾಸಿ ಜಿ.ಎಂ.ಪಲ್ಲವಿ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿ ವಜಾಗೊಳಿಸಿದೆ. ಅರ್ಜಿದಾರರು ಸಹೋದರ ಮೃತಪಟ್ಟ ವೇಳೆ ಅವರ ಆದಾಯದ ಮೇಲೆ ತಾನು ಅವಲಂಬಿತವಾಗಿದ್ದರು ಎಂಬುದನ್ನು ದೃಢೀಕರಿಸುವ ಸಾಕ್ಷ್ಯ ಸಲ್ಲಿಸಿಲ್ಲ. ಅನುಕಂಪದ ಉದ್ಯೋಗ ಪಡೆಯಲು ಮೃತ ನೌಕರರ ಕುಟುಂಬ ಆರ್ಥಿಕ ಮುಗ್ಗಟ್ಟಿನಲ್ಲಿದೆ ಎಂದು ದೃಢಪಡಿಸುವ ದಾಖಲೆ ಇಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದ ಮೇಲ್ಮನವಿದಾರರನ್ನು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದ ಆದೇಶ ಸೂಕ್ತವಾಗಿದೆ. ಇದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ವಿಭಾಗೀಯ ಪೀಠ ತಿಳಿಸಿದ್ದು, ಮೇಲ್ಮನವಿ ಅರ್ಜಿ ವಜಾಗೊಳಿಸಿದೆ.