
ಮಂಡ್ಯ: ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರಲ್ಲಿ ಹರಕೆ ಹೊರುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹೇಳಿದ್ದಾರೆ.
ಮಂಗಳವಾರ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಮಳವಳ್ಳಿಯ ನ್ಯಾಯಾಲಯಕ್ಕೆ ಹೊಸ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರಗತಿಯಲ್ಲಿ ನಡೆಯುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿರುವ ಶಾಸಕ ನರೇಂದ್ರ ಸ್ವಾಮಿಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರಲ್ಲಿ ಹರಕೆ ಹೊರುತ್ತೇನೆ ಎಂದು ಹೇಳಿದ್ದಾರೆ.
ಮಳವಳ್ಳಿಯಲ್ಲಿ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ತೊಡಕಾಗಿದ್ದ ಜಾಗದ ಸಮಸ್ಯೆಯನ್ನು ಶಾಸಕ ನರೇಂದ್ರ ಸ್ವಾಮಿ ಬಗೆಹರಿಸಿದ್ದಾರೆ. ಈ ಭಾಗದ ಅಭಿವೃದ್ಧಿಯ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಿ ದೇವರಲ್ಲಿ ಹರಕೆ ಹೊರುತ್ತೇನೆ. ನರೇಂದ್ರಸ್ವಾಮಿ ಸಚಿವರಾದ ಬಳಿಕ ನಾನೇ ಖುದ್ದು ದೇವಸ್ಥಾನಕ್ಕೆ ತೆರಳಿ ಹರಕೆ ತೀರಿಸುತ್ತೇನೆ ಎಂದು ನ್ಯಾಯಮೂರ್ತಿ ಶಿವಶಂಕರೇಗೌಡ ಹೇಳಿದ್ದಾರೆ.