ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕಾರದಲ್ಲಿ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರು ಬಂಧನಕ್ಕೆ ಒಳಗಾದ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಿ 2022ರ ಡಿಸೆಂಬರ್ 13ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಏಕಾಂತಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗಿಯ ಪೀಠ, ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮುರುಘಾ ಮಠ ಮತ್ತು ವಿದ್ಯಾಪೀಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ನೇಮಿಸಿದೆ. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಠದ ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕೆಂದು ಹೇಳಲಾಗಿದೆ.
ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ದೈನಂದಿನ ವ್ಯವಹಾರಗಳನ್ನಷ್ಟೇ ನಿಭಾಯಿಸಬೇಕು. ಯಾವುದೇ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಜಿಲ್ಲಾ ನ್ಯಾಯಾಧೀಶರು ನೆರವು ಕೋರಿದಲ್ಲಿ ಜಿಲ್ಲಾಧಿಕಾರಿ ನೆರವು ಕಲ್ಪಿಸಬೇಕು ಎಂದು ವಿಭಾಗಿಯ ಪೀಠ ನಿರ್ದೇಶನ ನೀಡಿದೆ. ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ.