ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಹೆಚ್ಚು ವೈದ್ಯ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. 454 ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ಇಲ್ಲ. 723 ಎಂಬಿಬಿಎಸ್ ವೈದ್ಯರ ಕೊರತೆ ಇದೆ. 7492 ನರ್ಸ್ ಗಳು, 1517 ಲ್ಯಾಬ್ ಟೆಕ್ನಿಷಿಯನ್, 1512 ಫಾರ್ಮಾಸಿಸ್ಟ್ ಕೊರತೆ ಇದೆ. 1752 ಅಟೆಂಡರ್, 3253 ಗ್ರೂಪ್ ಡಿ ನೌಕರರ ಕೊರತೆ ಇದೆ.
ಕರ್ನಾಟಕದ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಮೂಲ ಸೌಕರ್ಯ ಕೊರತೆ ಇದೆ. ಈ ಸಂಬಂಧ ಎಫ್.ಕೆ.ಸಿ.ಸಿ.ಐ. ವರದಿ ಬಿಡುಗಡೆ ಮಾಡಿತ್ತು. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶ ನೀಡಲಾಗಿದೆ.