ಬೆಂಗಳೂರು: ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದೆ.
ಸರ್ಕಾರಿ ಭೂಮಿಯೊಂದರ ಒತ್ತುವರಿ ಪ್ರಕರಣದಲ್ಲಿ ತೆರವು ಕಾರ್ಯಚರಣೆ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಸಲು ಕೋರಿದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವು ಮಾಡಬೇಕು. ಈ ವಿಚಾರದಲ್ಲಿ ಹೊಣೆಗಾರಿಕೆ ನಿಭಾಯಿಸಿದ ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.
ಈ ಪ್ರಕರಣ ಒಂದು ಸಣ್ಣ ಉದಾಹರಣೆ ಅಷ್ಟೇ. ಇಂಥ ನೂರಾರು ಪ್ರಕರಣಗಳಿದ್ದು, ಅವುಗಳ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ. ಈ ಆದೇಶದ ಅನುಪಾಲನೆಗೆ ಸರ್ಕಾರ ಮತ್ತು ಬೆಂಗಳೂರು ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ನಾಲ್ಕು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ.