ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಡಿಎ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ರಾಜ್ಯಪಾಲರ ಪೂರ್ವಾನುಮತಿ ನೀಡಿದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದ್ದು, ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು. ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ 9 ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆಯನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸೋಮವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.