
ಬೆಂಗಳೂರು: ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ವೇ ಸೈಡ್ ಅಮಿನಿಟೀಸ್ ಕೇಂದ್ರದಲ್ಲಿ ಸ್ನಾನಗೃಹ, ಶೌಚಗೃಹ, ವಿಶ್ರಾಂತಿ ಕೊಠಡಿ, ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್, ಪೆಟ್ರೋಲ್ ಬಂಕ್, ಹೆಲ್ತ್ ಸೆಂಟರ್, ಗ್ಯಾರೇಜ್, ಕ್ಯಾಂಟೀನ್ ಮೊದಲಾದ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು.
ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯವ್ಯಯ ಘೋಷಣೆಗಳ ಅನುಷ್ಠಾನ ಕುರಿತು ಜೂನ್ 3 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ರಾಜ್ಯದಲ್ಲಿರುವ ಹೆದ್ದಾರಿಗಳ ಅಕ್ಕಪಕ್ಕ ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಒದಗಿಸುವ ಕುರಿತು 2022 -23ನೇ ಬಜೆಟ್ನಲ್ಲಿ ಘೋಷಿಸಲಾಗಿತ್ತು.