ಬೆಂಗಳೂರು: ನಾಳೆ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ತೀರ್ಪು ಪ್ರಕಟಿಸಲಾಗುವುದು. ಸಮವಸ್ತ್ರ ಧರಿಸಿ ತರಗತಿಗೆ ಪ್ರವೇಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುದೀರ್ಘ 11 ದಿನಗಳ ಕಾಲ ನಡೆದಿತ್ತು. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹಿಜಾಬ್ ವಿಚಾರ ಪ್ರತಿಧ್ವನಿಸಿತ್ತು. ಈ ಮಹತ್ವದ ಪ್ರಕರಣದ ತೀರ್ಪು ನಾಳೆ ಪ್ರಕಟವಾಗಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅನೇಕ ಜಿಲ್ಲೆಗಳಲ್ಲಿಯೂ ಸೂಕ್ಷ್ಮ ಪ್ರದೇಶಗಳಲ್ಲಿ, ಶಾಲಾ-ಕಾಲೇಜುಗಳಿಗೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಒಂದು ವಾರ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿಗಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಮೈಸೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಗದಗ, ಕಲಬುರ್ಗಿ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ರಾಮನಗರ, ವಿಜಯಪುರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಧಾರವಾಡ, ಉತ್ತರಕನ್ನಡ, ರಾಯಚೂರು, ಶಿವಮೊಗ್ಗ, ಹಾಸನ, ತುಮಕೂರು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಕಲ್ಬುರ್ಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಯಶವಂತ್ ಗುರುಕಾರ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಮಾರ್ಚ್ 19 ರಂದು ಬೆಳಗ್ಗೆ 6 ಗಂಟೆಯಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ಪ್ರತಿಭಟನೆ, ವಿಜಯೋತ್ಸವಕ್ಕೆ ಅವಕಾಶ ಇರುವುದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆ ನಡೆಯಲಿದೆ.