ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಒಂದೆಡೆ ಕೇಸರಿ ಶಾಲು ಧರಿಸಿಬಂದ ಹಿಂದೂ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದ್ದಾರೆ.
ಇದೇ ವೇಳೆ ಕಾಲೇಜಿನ ಮೇಲೆ ಕೆಲ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಲ್ಲು ತೂರಾಟ ಘಟನೆ ಬೆನ್ನಲ್ಲೇ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾಲೇಜು ಸಿಬ್ಬಂದಿಗಳು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸ್ಥಳದಿಂದ ತೆರಳುವಂತೆ ಮನವಿ ಮಾಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದಿದೆ.
ಕಾಲೇಜು ಸಿಬ್ಬಂದಿಗಳ ಮನವಿಗೂ ಕಿವಿಗೊಡದ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಲ್ಲು ತೂರಾಟ ನಡೆಸಿದ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.