ಬೆಂಗಳೂರು: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಬೇರೂರಿದ ಉಪನೋಂದಣಾಧಿಕಾರಿಗಳು ಮತ್ತು ಪಿಡಿಒಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ ನಲ್ಲಿ ಪ್ರಕಟಿಸಿದ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಐದು ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರು ಸೇರಿ ವಿವಿಧ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಉಪ ನೋಂದಣಾಧಿಕಾರಿ, ಹಿರಿಯ ಉಪ ನೋಂದಣಾಧಿಕಾರಿಗಳ ವರ್ಗಾವಣೆಗೆ ಆಗಸ್ಟ್ 10ರೊಳಗೆ ಕೌನ್ಸೆಲಿಂಗ್ ನಡೆಸಲು, ಪಿಡಿಒ, ಗ್ರಾಮೀಣಾಭಿವೃದ್ಧಿ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಕಳೆದ 8 ವರ್ಷಗಳಲ್ಲಿ 5 ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ನೋಂದಣಾಧಿಕಾರಿ, ಹಿರಿಯ ಉಪ ನೋಂದಣಾಧಿಕಾರಿಗಳು, 4 ವರ್ಷಕ್ಕಿಂತ ಹೆಚ್ಚು ಕಾಲ ಸಂಬಂಧಪಟ್ಟ ಪಾಲಿಕೆಯಲ್ಲೇ ಇರುವ ಉಪ ನೋಂದಣಾಧಿಕಾರಿ, ಹಿರಿಯ ಉಪ ನೋಂದಣಾಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್ 10ರೊಳಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.
ಕರ್ನಾಟಕ ನಾಗರಿಕ ಸೇವೆಗಳ ಅಡಿ ಬರುವ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಕುರಿತು ರಚಿಸಿದ ಕರಡು ನಿಯಮಗಳನ್ನು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.