ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 7) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿವೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ.
ಮಳೆಯಲ್ಲಿ ಮಕ್ಕಳು ಶಾಲೆಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ. ಹಲವು ಕಡೆ ನದಿ ಹಳ್ಳಗಳು ತುಂಬಿ ತುಳುಕುತ್ತಿದೆ.ಇನ್ನೂ, ಜುಲೈ 8 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC) ತಿಳಿಸಿದೆ. ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.