ಮಡಿಕೇರಿ : ದಕ್ಷಿಣ ಭಾರತದ ಪುಣ್ಯ ಕ್ಷೇತ್ರವಾದ ಕಾವೇರಿಯ ತವರು ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಮಂಗಳವಾರ ರಾತ್ರಿ 1.27 ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಪುಣ್ಯ ಕಾಲ ನೆರವೇರಲಿದೆ.
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಒಂದು ತಿಂಗಳಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿಂದ ತಲಕಾವೇರಿಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ..
ಅಗತ್ಯ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಹಿಂದಿನಂತೆ ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡಲದಿಂದ ತಲಕಾವೇರಿ ವರೆಗೆ ವಿದ್ಯುತ್ ದೀಪ, ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈದ್ಯರು ಮತ್ತು ಶ್ರುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು.
ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್‍ನ್ನು ಬಳಸಬಾರದು. ಸ್ವಪ್ರೇರಣೆಯಿಂದ ಭಕ್ತಾಧಿಗಳೇ ಪ್ಲಾಸ್ಟಿಕ್‍ನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕೋರಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾಹಿತಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‍ಪಿ, 9 ಪೊಲೀಸ್ ಇನ್ಸ್‍ಪೆಕ್ಟರ್, 15 ಸಬ್ ಇನ್ಸ್‍ಪೆಕ್ಟರ್‍ಗಳು, 30 ಮಂದಿ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗಳು, 350 ಹೆಡ್‍ಕಾನ್ಸಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋ ಬಸ್ತ್ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಭಾಗಮಂಡಲದಿಂದ-ತಲಕಾವೇರಿ, ತಲಕಾವೇರಿಯಿಂದ ಭಾಗಮಂಡಲಕ್ಕೆ 20 ಬಸ್‍ಗಳು ಸಂಚರಿಸಲಿವೆ. ಹಾಗೆಯೇ ಜನದಟ್ಟಣೆ ನೋಡಿಕೊಂಡು ಮಡಿಕೇರಿ-ಭಾಗಮಂಡಲ, ಭಾಗಮಂಡಲದಿಂದ-ಮಡಿಕೇರಿ ಮಾರ್ಗ ಬಸ್‍ಗಳು ಸಂಚರಿಸಲಿವೆ ಎಂದು ಕೆಎಸ್‍ಆರ್‍ಟಿಸಿ ಡಿಪೋ ವ್ಯವಸ್ಥಾಪಕರಾದ ಮೆಹಬೂಬ ಆಲಿ ಅವರು ಮಾಹಿತಿ ನೀಡಿದರು.