ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ, ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ. ಸಿಡಿಯನ್ನು ಎಲ್ಲೆಲ್ಲಿ ತಯಾರಿಸಲಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಎಸ್ಐಟಿ ರಚಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮ್ಮ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು, ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ರಮೇಶ್ ಜಾರಕಿಹೊಳಿ ಪತ್ರ ಬರೆದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕಷವಾಗಿ ವಿಚಾರಣೆ ಮಾಡಲು ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ತನಿಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.