
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹನಿಟ್ರ್ಯಾಪ್ ಪ್ರಕರಣ ತಲುಪಿದೆ. ಹೈಕಮಾಂಡ್ ನಾಯಕರ ಭೇಟಿಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ನಿರ್ಧರಿಸಿದ್ದಾರೆ.
ಹೈಕಮಾಂಡ್ ನಾಯಕರ ಭೇಟಿಗೆ ಮೊದಲು ಅವರು ದೂರು ನೀಡಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಮತ್ತು ದಾಖಲೆಗಳನ್ನು ಹೈಕಮಾಂಡ್ ನಾಯಕರಿಗೆ ನೀಡುವ ಸಾಧ್ಯತೆ ಇದೆ. ಅಲ್ಲದೇ, ಸದನದಲ್ಲಿಯೂ ವಿಷಯ ಪ್ರಸ್ತಾಪಿಸಲು ಅವರು ಮುಂದಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಪ್ರಕರಣದ ಮಾಹಿತಿ ನೀಡಲಿದ್ದಾರೆ. ಅವರೊಂದಿಗೆ ಹಿರಿಯ ಸಚಿವರಾದ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಹೆಚ್.ಸಿ. ಮಹದೇವಪ್ಪ ಕೂಡ ದೆಹಲಿಗೆ ತೆರಳಿ ಪ್ರಕರಣದ ಬಗ್ಗೆ ಹೈಕಮಾಂಡ್ ನಾಯಕರಿಗೆ ವಿವರ ನೀಡಲಿದ್ದಾರೆ. ಹನಿಟ್ರ್ಯಾಪ್ ಅನೇಕ ಪ್ರಕರಣದಿಂದ ಡ್ಯಾಮೇಜ್ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸಚಿವ ರಾಜಣ್ಣ ಅವರ ಪುತ್ರ, ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಪ್ರಕರಣದ ಬೆಳವಣಿಗೆಯ ವಿವರ ನೀಡಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಇನ್ನೂ ಎರಡು ಮೂರು ದಿನಗಳಲ್ಲಿ ದೂರು ನೀಡುವುದಾಗಿ ರಾಜೇಂದ್ರ ತಿಳಿಸಿದ್ದಾರೆ.
ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲು ಸಚಿವ ರಾಜಣ್ಣ ದೆಹಲಿಗೆ ತೆರಳಲಿದ್ದಾರೆ. ಈ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ಮಾಹಿತಿ ಪಡೆದುಕೊಂಡಿದೆ.