ಕಾರವಾರ: ಖಾಸಗಿ ಬಂದರು ಕಾಮಗಾರಿಗೆ ಮೀನುಗಾರರು ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿಗೆ ತಡೆಯೊಡ್ದಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಟೊಂಕಾ ಬಂದರು ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ದಂಡಾಧಿಕಾರಿ ಗಂಗೂಬಾಯಿ ಮಾನಕರ್ ಹೊನ್ನಾವರದ ಕಾಸರಕೋಡ ಟೊಂಕಾ ಬಂದರು ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಬಂದರು ಕಾಮಗಾರಿಗೆ ಬಂದಿದ್ದ ಕಾರ್ಮಿಕರ ಮೇಲೆ ಮೀನುಗಾರರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೆಲಸಕ್ಕೆ ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ ಮೂರು ವರ್ಷಗಳಿಂದಲೂ ಮೀನುಗಾರರು ಖಾಸಗಿ ಬಂದರು ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇದೀಗ ಮತ್ತೆ ಕಾಮಗಾರಿ ಆರಂಭವಾಗಿತ್ತು. ಆದರೆ ಸ್ಥಳೀಯ ಮೀನುಗಾರರು ಖಾಸಗಿ ಬಂದರು ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.